ನವದೆಹಲಿ: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನ ಮಹಾಕುಂಭಮೇಳದಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಘಟನಾ ಸ್ಥಳಕ್ಕೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಗ್ನಿ ಅವಘಡದ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದಾರೆ.
ಕುಂಭಮೇಳ ಪ್ರದೇಶದ ಸೆಕ್ಟರ್ 19ರಲ್ಲಿ ಸಿಲಿಂಡರ್ ಸ್ಫೋಟಗೊಂಡಿದ್ದು, ಸ್ಫೋಟದ ತೀವ್ರತೆಗೆ ಟೆಂಟ್ ಗಳು ಸುಟ್ಟು ಹೋಗಿವೆ. ವಿವೇಕಾನಂದ ಸೇವಾ ಸಮಿತಿಗೆ ಸೇರಿದ ಟೆಂಟ್ ಗಳು ಬೆಂಕಿಗೆ ಆಹುತಿಯಾಗಿವೆ. ಕೂಡಲೇ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಲು ಕಾರ್ಯಾಚರಣೆ ನಡೆಸಿದ್ದಾರೆ.
ಕುಂಭಮೇಳ ಪ್ರದೇಶದ ಸೆಕ್ಟರ್ 20ಕ್ಕೂ ಬೆಂಕಿ ವ್ಯಾಪಿಸುತ್ತಿದೆ. ಸೆಕ್ಟರ್ 19ರಲ್ಲಿ ಸುಮಾರು 12ಕ್ಕೂ ಹೆಚ್ಚು ಸಿಲಿಂಡರ್ ಗಳು ಸ್ಪೋಟಗೊಂಡಿದ್ದು, ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿಯನ್ನು ನಂದಿಸಲು ಹರಸಾಹಸ ನಡೆಸಿದ್ದಾರೆ. 50ಕ್ಕೂ ಹೆಚ್ಚು ಅಗ್ನಿಶಾಮಕ ಸಿಬ್ಬಂದಿ, ಎಸ್‌ಡಿಆರ್‌ಎಫ್ ನಿಂದ ಬೆಂಕಿ ನಂದಿಸಲು ಕಾರ್ಯಾಚರಣೆ ನಡೆಸಲಾಗಿದೆ.
ಪ್ರಯಾಗರಾಜ್ ನಲ್ಲಿ ಸಂಭವಿಸಿದ ಬೆಂಕಿ ಅವಘಡದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಗೆ ಕರೆ ಮಾಡಿ ಅವರೊಂದಿಗೆ ಮಾತನಾಡಿ ಘಟನೆ ಕುರಿತು ವಿಚಾರಿಸಿದ್ದಾರೆ. ಪ್ರಾಥಮಿಕ ಮಾಹಿತಿ ಪ್ರಕಾರ, ಬೆಂಕಿಯನ್ನು ನಂದಿಸಲಾಗಿದೆ. ಯಾವುದೇ ಸಾವುನೋವುಗಳು ವರದಿಯಾಗಿಲ್ಲ.