ರಾಜ್ಯ ಸರ್ಕಾರಿ ನೌಕರರ ಎರಡು ಪ್ರಮುಖ ಬೇಡಿಕೆಗಳನ್ನು ಸರ್ಕಾರ ಈಡೇರಿಸಿದೆ. ಈ ಬೇಡಿಕೆ ಈಡೇರಿಸಿದಂತಹ ರಾಜ್ಯದ ಕಾಂಗ್ರೆಸ್ ಸರ್ಕಾರಕ್ಕೆ ಸಾಗರ ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎನ್.ಸಂತೋಷ್ ಕುಮಾರ್ ಧನ್ಯವಾದ ತಿಳಿಸಿದ್ದಾರೆ.
ರಾಜ್ಯ ಸರ್ಕಾರದ ಸಮಗ್ರ ವೇತನ ಪ್ಯಾಕೇಜ್ ಕಾರಣದಿಂದ ಸರ್ಕಾರಿ ನೌಕರರು ರಾಷ್ಟ್ರೀಕೃತ ಬ್ಯಾಂಕುಗಳ ಮೂಲಕ ಸಾಲ ಸೌಲಭ್ಯ ಪಡೆಯಲು ಅನುಕೂಲ ಆಗಲಿದೆ. ಬ್ಯಾಂಕುಗಳ ಜೊತೆಗಿನ ಒಡಂಬಡಿಕೆಯಿಂದ ಸರ್ಕಾರಿ ನೌಕರರಿಗೆ ಕ್ಷಣಾರ್ಧದಲ್ಲಿ ಗೃಹ, ವಾಹನ, ಉನ್ನತ ಶಿಕ್ಷಣ ಸಾಲ ಸೇರಿದಂತೆ ಇತರೆ ಸೌಲಭ್ಯಗಳು ದೊರೆಯುವಂತೆ ಆಗಲಿದೆ ಎಂದರು.
ರಾಜ್ಯ ಸರ್ಕಾರಿ ನೌಕರರ ಬಹು ದಿನಗಳ ಬೇಡಿಕೆ ಆದಂತಹ ಎಸ್‌ಪಿಎಸ್ ರದ್ದುಗೊಳಿಸಿ, ಓಪಿಎಸ್ ಜಾರಿಗೊಳಿಸುವತ್ತ ಕ್ರಮ ಆಗಬೇಕು. ಈಗಾಗಲೇ ಈ ಪ್ರಕ್ರಿಯೆ ಜಾರಿಯಲ್ಲಿದ್ದು, ಶೀಘ್ರವೇ ಸರ್ಕಾರಿ ನೌಕರರಿಗೆ ಹೊಸ ಪಿಂಚಣಿ ಯೋಜನೆ ರದ್ದುಗೊಳಿಸಿ, ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವಂತೆ ಒತ್ತಾಯಿಸಿದರು.
ರಾಜ್ಯಾಧ್ಯಕ್ಷ ಸಿ.ಎಸ್ ಷಡಕ್ಷರಿ ರಾಜ್ಯ ಸರ್ಕಾರದ ಮುಂದೆ ಇರಿಸಿದ್ದಂತ ಅನೇಕ ಬೇಡಿಕೆಗಳನ್ನು ಈಡೇರಿಸಿದೆ. ಇನ್ನೂ ಕೆಲವಕ್ಕೆ ಸಕಾರಾತ್ಮಕವಾಗಿಯೇ ಸ್ಪಂದಿಸಿದೆ. ಷಡಕ್ಷರಿಯವರು ನೌಕರರ ಬೇಡಿಕೆಯನ್ನು ಸರ್ಕಾರದ ಮೇಲೆ ಒತ್ತಡ ಹೇರುವ ಮೂಲಕ ಈಡೇರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆದ್ದರಿಂದ ಸರ್ಕಾರಿ ನೌಕರರ ವಿವಿಧ ಬೇಡಿಕೆ ಈಡೇರಿಸಿದಂತ ಸಿಎಂ ಸಿದ್ಧರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಸಚಿವರು ಹಾಗೂ ಶಾಸಕರಿಗೆ ನೌಕರರ ಸಂಘ ಕೃತಜ್ಞತೆ ಸಲ್ಲಿಸುತ್ತದೆ ಎಂದರು